ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಬೇಕು ಹಾಗೂ ಅರ್ಜಿಯನ್ನು ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ರಾಜಕೀಯ ರಹಿತವಾದ ಇತರೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವ ಆಯೋಜಕರು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಯಲ್ಲಿ ಮತ್ತು ಮಹಾನಗರ ಪಾಲಿಕೆಯಲ್ಲಿ ತೆರೆಯಲಾಗಿರುವ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಬೇಕು ಹಾಗೂ ಅರ್ಜಿಯನ್ನು ಸಲ್ಲಿಸಿ ತಾಲೂಕು ತಹಶೀಲ್ದಾರರಿಂದ ಮತ್ತು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಿಂದ ಅನುಮತಿಯನ್ನು ಪಡೆದುಕೊಳ್ಳುವಂತೆ ಸೂಚಿಸಿದೆ.

Also Read  ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! - ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಮದುವೆ ಮತ್ತು ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸುವವರು ಅನುಮತಿಯನ್ನು ಪಡೆಯುವ ಅವಶ್ಯಕತೆ ಇರುವುದಿಲ್ಲ. ಆದರೆ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು. ಸಾರ್ವಜನಿಕರು ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top