ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಅಭ್ಯರ್ಥಿಯ ವಾಹನವನ್ನು ಒಳಗೊಂಡಂತೆ ಗರಿಷ್ಠ ಮೂರು ವಾಹನಗಳಿಗೆ ಮಾತ್ರ ಕಚೇರಿಯ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ ಹಾಗೂ ಅಭ್ಯರ್ಥಿಯನ್ನು ಒಳಗೊಂಡಂತೆ ಗರಿಷ್ಠ 5 ಜನರಿಗೆ ಮಾತ್ರ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ. 5 ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಚುನಾವಣೆ ನಡೆಯುವ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ವಿರೂಪವನ್ನು ಉಂಟು ಮಾಡುವುದಾಗಲಿ ಅಥವಾ ನಾಶಗೊಳಿಸುವುದಾಗಲಿ ಮಾಡುವಂತಿಲ್ಲ. ಈ ಆದೇಶವು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶಿಸಲಾಗಿದೆ.

error: Content is protected !!

Join WhatsApp Group

WhatsApp Share