(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯವು ಶುಕ್ರವಾರದಂದು ಆದೇಶಿಸಿದೆ.
ಈ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿದ್ದರು. ಬೆದರಿಸಿ ಎಲೆಕ್ಟೋರಲ್ ಬಾಂಡ್ ಮೂಲಕ ಸುಲಿಗೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಗೆ ಆದೇಶಿಸಿದೆ.
ಜನಾಧಿಕಾರ ಸಂಘರ್ಷ ಪರಿಷತ್ತು 2024ರ ಏಪ್ರಿಲ್‌ನಲ್ಲಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ನಾಯಕರು, ಅಂದಿನ ಬಿಜೆಪಿ ಕರ್ನಾಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿವೈ ವಿಜಯೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರನ್ನು ಪರಿಗಣಿಸಿದ ನ್ಯಾಯಾಲಯ, ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದರು.