(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಅದೇ ರೀತಿ ಅ.9ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದೆ.