ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಮೆರವಣಿಗೆ ಅಥವಾ ಸಭೆ/ಸಮಾರಂಭ ಮಾಡುವುದನ್ನು ನಿಷೇಧಿಸಲಾಗಿದೆ. ಮತ ಎಣಿಕಶ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

Also Read  ಸಮಾಜ ಕಲ್ಯಾಣ ಇಲಾಖೆ ಮಂಗಳೂರು ➤ ದೀಕ್ಷಾ ಭೂಮಿಯಾತ್ರೆಗೆ ಅರ್ಜಿ ಆಹ್ವಾನ


ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಚುನಾವಣೆಯ ಮತ ಎಣಿಕೆ ಫಲಿತಾಂಶದ ಸಮಯದಲ್ಲಿ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳ ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಗ್ರಿಗಳನ್ನು ಧರಿಸುವುದನ್ನು ನಿಷೇಧಿಸಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕ ಅಥವಾ ಉದ್ರಿಕ್ತ ಕಾರ್ಯ ಹಾಡುಗಳು ಕೂಗಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

Also Read  ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಆದೇಶವು ಚುನಾವಣಾ ಕಾರ್ಯನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.

error: Content is protected !!
Scroll to Top