(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ‘ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಸುತ್ತೋಲೆ ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಲು ನಿರಾಕರಿಸಿರುವ ಹೈಕೋರ್ಟ್, ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ.
ಈ ಸಂಬಂಧ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್, ಟೈಟಾನ್ ಕಂಪನಿ ಲಿಮಿಟೆಡ್, ಅಡಿಡಾಸ್ ಇಂಡಿಯಾ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 24 ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿವೆ.