(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು (ಮಾ. 20) ಮಂಗಳೂರಿಗೆ ಭೇಟಿ ನೀಡಲಿದ್ದು, ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು.
ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಿಗ್ಗೆ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3.30ಕ್ಕೆ ಮುಲ್ಕಿ ಮತ್ತು 4:20ಕ್ಕೆ ಸುರತ್ಕಲ್‌ನಲ್ಲಿ ಜನಾಶೀರ್ವಾದ ಯಾತ್ರೆ ಮುಂದುವರಿಸಲಿದ್ದಾರೆ ಎಂದರು. ಸಂಜೆ 5.20 ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ರೋಡ್ ಶೋ ನಡೆಸಿ, ನೆಹರೂ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಚುನಾವಣಾ ಪೂರ್ವ ರಾಹುಲ್ ಭೇಟಿ ಇದಾಗಿದ್ದು, ರಾತ್ರಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ಉಳ್ಳಾಲದ ಸಯ್ಯದ್ ಮದನಿ ದರ್ಗಾ, ರೊಸಾರಿಯೋ ಚರ್ಚ್‌ಗೆ ಭೇಟಿ ನೀಡಿದ ಬಳಿಕ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಲಿರುವ ರಾಹುಲ್ ಮರುದಿನ ಬೆಳಗ್ಗೆ ಶೃಂಗೇರಿಗೆ ತೆರಳಲಿದ್ದಾರೆ ಎಂದರು.
ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಕರಾವಳಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಯವರ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗು ರಾಷ್ಟ್ರ, ರಾಜ್ಯದ ಹಲವು ನಾಯಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೇರಿದಂತೆ ಒಂದು ಲಕ್ಕಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.