ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

(ನ್ಯೂಸ್ ಕಡಬ) newskadaba.com ನ. 06. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಸೇರಿಸಬೇಕು ಎಂದು ಲೋಕಸಭಾ ಸದಸ್ಯ ಕ್ಯಾ|| ಬ್ರಿಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಅಡಿ ನೋಂದಣಿಯಾದ ಆಸ್ಪತ್ರೆಗಳನ್ನು ಹುಡುಕುವುದು ಕಷ್ಟ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಸವಲತ್ತುಗಳು ಹಾಗೂ ಆಸ್ಪತ್ರೆಗಳ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತಾಗಲು ಪ್ರತ್ಯೇಕ ಆ್ಯಪ್ ಸಿದ್ದಗೊಳಿಸಬೇಕು ಎಂದು ಸಂಸದರು ಸೂಚಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳಿದ್ದು, ಆರೋಗ್ಯ ವ್ಯವಸ್ಥೆ ಉತ್ತಮವಾಗಿದೆ. ಆದರೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆಗಳು ಪಡೆಯುವಲ್ಲಿ ಗೊಂದಲಗಳು ಉಂಟಾಗುತ್ತಿರುವುದು ವಿಷಾದಕರ ಎಂದು ಸಂಸದ ಬ್ರಿಜೇಶ್ ಚೌಟ ಅಸಮಾಧಾನ ವ್ಯಕ್ತಪಡಿಸಿದರು. ಆಯುಷ್ಮಾನ್ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಭಿಸುವುದು, ರೋಗಿಗಳನ್ನು ಅಲೆದಾಡಿಸುವುದು, ಸರಕಾರಿ ಆಸ್ಪತ್ರೆಯ  ಶಿಫಾರಸು ಪತ್ರ ನೀಡಲು ವಿಳಂಬಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆ, ಆಸ್ಪತ್ರೆ ಮತ್ತು ರೋಗಿಗಳ ನಡುವೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲವೂ ಆಯುಷ್ಮಾನ್  ಸೇವೆ ಲಭ್ಯವಿರಬೇಕು ಎಂದು ಸಂಸದರು ಹೇಳಿದರು.

Also Read  ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ

ಎಪಿಎಲ್: ಆಯುಷ್ಮಾನ್ ನಿರಾಕರಿಸುವಂತಿಲ್ಲ

ಯಾವುದೇ ಆಸ್ಪತ್ರೆಗಳು ಎಪಿಎಲ್ ಕುಟುಂಬಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ ರೂ. 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಎಪಿಎಲ್ ಕುಟುಂಬದವರಿಗೆ ಒಟ್ಟಾರೆ ಚಿಕಿತ್ಸೆ ವೆಚ್ಚದಲ್ಲಿ 30% ರಿಯಾಯಿತಿ ಪಡೆಯಲು ಅವಕಾಶ ಇದೆ. ಆದರೆ ಕೆಲವು ಆಸ್ಪತ್ರೆಗಳಲ್ಲಿ ಎಪಿಎಲ್ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಸವಲತ್ತು ನೀಡಲು ನಿರಾಕರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು ಈ ಬಗ್ಗೆ ಕ್ರಮ ಜರುಗಿಸಬೇಕಾಗಬಹುದು ಎಂದು ಅವರು ಎಚ್ಚರಿಕೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮಾತನಾಡಿ, ಕಳೆದ ಆಗಸ್ಟ್ ತಿಂಗಳೊಂದರಲ್ಲಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಿದ ಮೊತ್ತ ರೂ. 15.08 ಲಕ್ಷವನ್ನು ವಿವಿಧ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಶಿವಕುಮಾರ್ ಮಾತನಾಡಿ, ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ನೀಡಲು ಅವಕಾಶವಿಲ್ಲ. ಸಣ್ಣ ಕಾಯಿಲೆಗಳಿಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಿಫಾರಸ್ಸು ನೀಡಲು ಒತ್ತಡ ಬರುತ್ತಿದ್ದು, ಇದಕ್ಕೆ ನಿಯಮದಲ್ಲಿ ಅವಕಾಶವಿಲ್ಲವೆಂದು ಅವರು ತಿಳಿಸಿದರು. ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ,  ಉಮಾನಾಥ ಕೋಟ್ಯಾನ್ ವಿವಿಧ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

error: Content is protected !!
Scroll to Top