(ನ್ಯೂಸ್ ಕಡಬ) newskadaba.com ಮಂಗಳೂರು, ನ. 06. ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು ಅಳವಡಿಸುವ ಸಂಬಂಧ ಸೂಚನೆ ನೀಡಲಾಗಿತ್ತು. ಆದರೆ, ಇದು ಪಾಲನೆಯಾಗುತ್ತಿಲ್ಲ ಎಂದರು. ಖಾಸಗಿ ಬಸ್ ಮಾಲೀಕರ ಸಂಘದ ಪರವಾಗಿ ವಾದ ಮಂಡಿಸಿದ ವಕೀಲರು, ‘ಮಂಗಳೂರು- ಕಾರ್ಕಳ- ಮೂಡುಬಿದಿರೆ ಮಾರ್ಗದಲ್ಲಿ ಖಾಸಗಿ ಬಸ್‌ಗಳು ಮೂರೂವರೆ ದಶಕಗಳಿಂದ ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ. ಪ್ರಯಾಣಿಕರ ಅನುಕೂಲಕ್ಕೆ ಪ್ರತಿ ಐದು ನಿಮಿಷಕ್ಕೊಂದರಂತೆ ಬಸ್‌ಗಳು ಸಂಚರಿಸುತ್ತವೆ. ಅನಾರೋಗ್ಯಕರ ಪೈಪೋಟಿಯಿಂದ ದಕ್ಷಿಣ ಕನ್ನಡದಲ್ಲಿ ಉತ್ತಮ ಸೇವೆ ನೀಡುತ್ತಿರುವ ಖಾಸಗಿ ಬಸ್ ವ್ಯವಸ್ಥೆ ಸಂಕಷ್ಟಕ್ಕೆ ಒಳಗಾಗುತ್ತದೆ’ ಎಂದರು. ಕೆಎಸ್‌ಆರ್‌ಟಿಸಿ ಸಲ್ಲಿಸಿರುವ ಬೇಡಿಕೆಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಗಡುವು ಕೇಳಿದರು.ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್ ಎನ್, ಮಹಾನಗರ ಪಾಲಿಕೆ ಆಯುಕ್ತ ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ಲಾಡ್ ಇದ್ದರು.