(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು.
ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ ಬಂದೋಬಸ್ತ್ ಕೈಗೊಳ್ಳಬೇಕು. ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರೂ ಕೇಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕ್ರಿಸ್‌ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು.