(ನ್ಯೂಸ್ ಕಡಬ) newskadaba.com ಡಿ.31: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ ಶಿಕ್ಷೆಯಾಗಿದೆ.
ಎನ್ ಐಎ ಕೋಲ್ಕತ್ತಾ ಶಾಖೆಯು ಬುರ್ದ್ವಾನ್ ಸ್ಫೋಟ ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಜೂನ್ 2019 ರಲ್ಲಿ ಬೆಂಗಳೂರು ನಗರ ಪೊಲೀಸರು ಆರಂಭಿಕವಾಗಿ ಪ್ರಕರಣ ದಾಖಲಿಸಿದ್ದರು. ಬಳಿಕ ಎನ್ ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಬಾಂಗ್ಲಾದೇಶದಲ್ಲಿ 2005ರಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು 2014 ರಲ್ಲಿ JMB ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಪರಾರಿಯಾಗಿದ್ದ ಜಹೀದುಲ್ ಇಸ್ಲಾಂ ಭಾರತ ಪ್ರವೇಶಿಸಿದ್ದ ಎಂದು ಎನ್ ಐಎ ತನಿಖೆಯಲ್ಲಿ ತಿಳಿದುಬಂದಿತ್ತು.