(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಸಮ್ಮತಿ ಸೂಚಿಸಿದ್ದು, ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ.
ಸುಗ್ರೀವಾಜ್ಞೆ ತಿರಸ್ಕರಿಸಲು ಗವರ್ನರ್ ಕಚೇರಿ ಹಲವು ಕಾರಣಗಳನ್ನು ಉಲ್ಲೇಖಿಸಿದೆ. ನಿಯಮ ಉಲ್ಲಂಘಿಸುವ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡ ಅತಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು. ಈ ಸುಗ್ರೀವಾಜ್ಞೆ ಮೈಕ್ರೋಫೈನಾನ್ಸ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಇದು ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಗಳನ್ನು ನೀಡಿ, ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದಾರೆ.
ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಸರ್ಕಾರ ಹರಿಸಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು 3 ಲಕ್ಷ ರೂ.ಗಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಾ? ಆದರೆ, ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.