(ನ್ಯೂಸ್ ಕಡಬ) newskadaba.com ಮಾ. 05 ಫರಂಗಿಪೇಟೆ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು. ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು.



ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಫೆ.25ರಂದು ರಾತ್ರಿ 7:30ರ ಸುಮಾರಿಗೆ ದೇವಸ್ಥಾನಕ್ಕೆಂದು ಮನೆಯಿಂದ ಹೋದವ ಬಳಿಕ ನಾಪತ್ತೆಯಾಗಿದ್ದಾನೆ. ಆತನ ಮೊಬೈಲ್ ಫೋನ್ ಮತ್ತು ಚಪ್ಪಲಿ ಮನೆಯಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಬಾಲಕನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.