(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಹಿಂದು ಸಂಘಟನೆಗಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಂಕಿತ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖುದ್ದು ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಮತ್ತೊಂದೆಡೆ ರಾಜ್ಯದ ಹಲವು ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ವಿಶೇಷ ಪೆರೇಡ್ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮೊನ್ನೆ ರಾತ್ರಿ 8.30ರ ಸುಮಾರಿನಲ್ಲಿ ಸುಹಾಸ್ ಶೆಟ್ಟಿಯನ್ನು ಜನ ಸಂದಣಿ ಇರುವ ಪ್ರದೇಶದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ತಕ್ಷಣವೇ ಬಿರುಸಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಶಂಕಿತ ಎಂಟು ಮಂದಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಆದರೆ ಪೊಲೀಸ್ ಇಲಾಖೆಯಿಂದ ಬಂಧನದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಮಂಗಳೂರಿನಲ್ಲಿ ಪದೇ ಪದೇ ಕೋಮು ಪ್ರಚೋದಿತ ದುರ್ಘಟನೆಗಳು ನಡೆಯುತ್ತಿರುವ ಬಗ್ಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.