(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೋಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು ಎಂದರು.
ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದೆ. ಕೇಂದ್ರ ಸರಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಟೆಸ್ಟಿಂಗ್ ಕಿಟ್‍ಗಳು ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. 5 ಸಾವಿರ ಆರ್‌ಟಿಪಿಸಿಆರ್ ಟೆಸ್ಟಿಂಗ್ ಕಿಟ್‍ಗಳನ್ನು ತೆಗೆದೊಳ್ಳಲಾಗಿದೆ ಎಂದು ಅವರು ಹೇಳಿದರು