(ನ್ಯೂಸ್ ಕಡಬ) newskadaba.com ಜು. 02. ಜುಲೈ 1ರಿಂದ ರೈಲ್ವೇ ಟಿಕೆಟ್ ದರವನ್ನು ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಹೇಳಿದ್ದಾರೆ.
ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ಮೋದಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಜನರ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸಿದರು
ದಿನನಿತ್ಯ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಟಿಕೆಟ್ ದರ ಹೆಚ್ಚಿಸುವ ಮೂಲಕ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ಅದೇ ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರದಲ್ಲಿ ಏರಿಕೆ ಮಾಡಿದಾಗ ಮತ್ತು ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.










