(ನ್ಯೂಸ್ ಕಡಬ) newskadaba.com ಆ. 18. ಭವಿಷ್ಯದ ದೃಷ್ಟಿಯಿಂದ ಬೆಂಗಳೂರು – ತುಮಕೂರು ನಡುವೆ ನಾಲ್ಕು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಹೀಗಾಗಿ ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿ ಹಮಿಕೊಂಡಿದ್ದ 11ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ರೈಲು ಅವಲಂಬನೆ ಹೆಚ್ಚಳವಾಗುವ ಹಿನ್ನಲೆ ತುಮಕೂರು- ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ನಗರದ ಹೊರವಲಯದ ತಿಮರಾಜನಹಳ್ಳಿ ಬಳಿ ರೈಲ್ವೆ ಇಲಾಖೆಯಿಂದ ಬೃಹತ್ ಗೋದಾಮು ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಸುಮಾರು 200 ಎಕರೆ ಜಾಗದ ಅವಶ್ಯಕತೆಯಿದೆ. ಈ ಬಗ್ಗೆ ಕೆಎಐಡಿಬಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡಿರುವುದಾಗಿ ಹೇಳಿದರು.
ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರಣಂ ರಮೇಶ್ ಅವರು, ತುಮಕೂರು-ಬೆಂಗಳೂರು ಮಾರ್ಗದಲ್ಲಿ ಹೆಚ್ಚಿನ ರೈಲು ಸೇವೆ ಒದಗಿಸಬೇಕು. ತುಮಕೂರಿನಿಂದ ಹೊರಡುವ ಮೆಮೊ ರೈಲು ಯಶವಂತಪುರದವರೆಗೆ ಇದೆ. ಅದನ್ನು ಸಂಗೊಳ್ಳಿ ರಾಯಣ್ಣ ನಿಲ್ದಾಣದವರೆಗೂ ವಿಸ್ತರಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವರನ್ನು ಕೋರಿದರು.













