(ನ್ಯೂಸ್ ಕಡಬ) newskadaba.com ಸೆ. 09. ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಸರ್ಕಾರಿ ನೌಕರರ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ನಿರ್ಲಕ್ಷ್ಯ ತೋರಿದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 199(C) ರಂತೆ ಕಡ್ಡಾಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದೆ. ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯ. ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುತ್ತದೆ.
ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿಯು ತಾಯಂದಿರ ಮರಣ, ಶಿಶು ಮರಣ, ಅಪೌಷ್ಠಿಕತೆ ಉಂಟು ಮಾಡುವುದಲ್ಲದೇ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಪರಿಣಾಮ ಉಂಟು ಮಾಡುತ್ತದೆ ಎಂದು ಹೇಳಿದ್ದಾರೆ.













