(ನ್ಯೂಸ್ ಕಡಬ) newskadaba.com ನವದೆಹಲಿ, ಎ.21. ಹನ್ನೆರಡು ವರ್ಷ ಪ್ರಾಯದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ವಿಧೇಯಕಕ್ಕೆ ಶನಿವಾರದಂದು ಕೇಂದ್ರ ಸರಕಾರ ಸಹಿ ಹಾಕುವ ಮೂಲಕ ಕಾಮುಕರ ವಿರುದ್ಧ ಮಹತ್ವದ ಹೆಜ್ಜೆಯಿಟ್ಟಿದೆ.
ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಶನಿವಾರದಂದು ಸ್ವದೇಶಕ್ಕೆ ಮರಳಿದ ಕೆಲವೇ ಗಂಟೆಗಳಲ್ಲಿ ತುರ್ತು ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಬಾಲಕಿಯರ ಲೈಂಗಿಕ ಶೋಷಣೆಯ ವಿರುದ್ಧ ಕಾಮುಕರಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಕಾನೂನಿಗೆ ತಿದ್ದುಪಡಿ ತಂದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟರ ಹರೆಯದ ಬಾಲಕಿ ಆಸಿಫಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಜಗತ್ತಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಮನೇಕಾ ಗಾಂಧಿ, ಲೈಂಗಿಕ ದೌರ್ಜನ್ಯ ಕಾನೂನಿಗೆ ತಿದ್ದುಪಡಿ ತರುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ವಿಧಿಸುವ ಕಾನೂನಿಗೆ ತಿದ್ದುಪಡಿ ತಂದಿದೆ ಎನ್ನಲಾಗಿದೆ.