(ನ್ಯೂಸ್ ಕಡಬ) newskadaba.com, ಅ.08: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ತೀವ್ರ ಅಸ್ವಸ್ಥತೆಯಿಂದಾಗಿ ದೇವೇಗೌಡ ಅವರು ಸೋಮವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ, ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಮಣಿಪಾಲ ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಆತಂಕಕ್ಕೆ ಯಾವುದೇ ಕಾರಣವಿಲ್ಲ. ದೇವೇಗೌಡ ಅವರ ಆರೋಗ್ಯವನ್ನು ತಜ್ಞರ ತಂಡ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.








