ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ



(ನ್ಯೂಸ್ಕಡಬ) newskadaba.com,  ..01: ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜೊತೆಗೆ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕೆಎಂಎಫ್‌ನ ‘ನಂದಿನಿ’ ಉತ್ಪನ್ನಗಳಾದ ತಿಂಡಿ ತಿನಿಸುಗಳನ್ನು ಬಳಸಲು ಸೂಚನೆ ನೀಡಲಾಗಿದೆ.





ಸಮಗ್ರ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಮಾತ್ರ ಬಳಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಇಲಾಖಾ ಮುಖ್ಯಸ್ಥರು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.






ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳು ಸೇರಿದಂತೆ, ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಸಭೆ-ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್‌ನ (ಕರ್ನಾಟಕ ಹಾಲು ಮಹಾಮಂಡಳಿ) ‘ನಂದಿನಿ’ ಉತ್ಪನ್ನಗಳ ತಿಂಡಿ-ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಆದೇಶಿಸಲಾಗಿದೆ.

ರಾಜ್ಯದ ಹಾಲು ಉತ್ಪಾದಕರಿಗೆ ಮತ್ತು ಸಹಕಾರಿ ಸಂಸ್ಥೆಗೆ ಬೆಂಬಲ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮತ್ತು ಸರ್ಕಾರಿ ಸ್ವಾಮ್ಯದ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಿದಂತಾಗಿದೆ.

ಈ ಕುರಿತು ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಚನೆಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿದೆ.

error: Content is protected !!
Scroll to Top