(ನ್ಯೂಸ್ ಕಡಬ) newskadaba.com, ನ.01 ಕಲಬುರಗಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ನಾಡಿನ ಸಾಹಿತ್ಯ ಮತ್ತು ರಾಷ್ಟ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹುಟ್ಟೂರಿಗೆ ವಿಶೇಷ ನೆರವು ಘೋಷಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಭಾರತ ರತ್ನ ಗೌರವ ಪಡೆದ ಕನ್ನಡಿಗರ ಹುಟ್ಟೂರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಶನಿವಾರ ಘೋಷಿಸಿದರು..
ಈ ಮಹತ್ವದ ಯೋಜನೆಯನ್ನು ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಜ್ಞಾನಪೀಠ ಪ್ರಶಸ್ತಿಯು ಭಾರತದ ಅತ್ಯುನ್ನತ ಸಾಹಿತ್ಯ ಗೌರವವಾಗಿದ್ದರೆ, ಭಾರತ ರತ್ನವು ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾಗಿದೆ. ಇಂತಹ ಪ್ರಶಸ್ತಿಗಳನ್ನು ಪಡೆದ ಮಹಾನ್ ವ್ಯಕ್ತಿಗಳ ನಾಡಿಗೆ ಸಣ್ಣದೊಂದು ಕಾಣಿಕೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಯಾವೆಲ್ಲಾ ಕ್ಷೇತ್ರಗಳಿಗೆ ಅನುದಾನ
ಪ್ರಕಟಿಸಿದ ಒಂದು ಕೋಟಿ ರೂಪಾಯಿ ಅನುದಾನವನ್ನು ಆಯಾ ಗ್ರಾಮಗಳ ನಿರ್ದಿಷ್ಟ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಅವಕಾಶ ನೀಡಲಾಗುತ್ತದೆ. ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಸಮುದಾಯ ಭವನಗಳ ನಿರ್ಮಾಣ, ಮತ್ತು ಗ್ರಾಮದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಈ ನಿಧಿಯನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.












