(ನ್ಯೂಸ್ ಕಡಬ) newskadaba.com, ನ.15 ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಗಾಳಿಯ ವೇಗ ಗಂಟೆಗೆ 10ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












