(ನ್ಯೂಸ್ ಕಡಬ) newskadaba.com ,ಜ.10 ಜನವರಿ 22 ರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದು, ಭೇಟಿ ವೇಳೆ ಹೈಕಮಾಂಡ್ ಜೊತೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಖಾಲಿಯಿರುವ ಎರಡು ಸಚಿವ ಸ್ಥಾನವನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಆಂತರಿಕ ಮೂಲಗಳು ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿವೆ.
ಕಾರ್ಯಕ್ಷಮತೆಯ ಆಧಾರದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಪುಟದಲ್ಲಿ ಬದಲಾವಣೆಗಳನ್ನು ತರಬಹುದು ಎಂದ ಮೂಲಗಳು ತಿಳಿಸಿವೆ.
ಮುಂದಿನ ಎರಡು ವರ್ಷಗಳ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ಷಮತೆ ಆಧಾರಿತ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ಷಮತೆ ತೃಪ್ತಿಕರವಾಗಿಲ್ಲ ಎಂದು ಪರಿಗಣಿಸಲಾದ 8ರಿಂದ 10 ಸಚಿವರ ಕಾರ್ಯಕ್ಷಮತೆಯನ್ನು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶ ಇದಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇತ್ತ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ರಾಯಬರೇಲಿ ಸಂಸದ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ಮರಳಿರುವುದು ಈ ಚರ್ಚೆಗಳಿಗೆ ಮತ್ತಷ್ಟು ಬಲ ನೀಡಿದೆ.












