(ನ್ಯೂಸ್ ಕಡಬ) newskadaba.com,ಫೆ,03 – ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು ಮಾರ್ಚ್ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ.
ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಮಾರ್ಚ್ 5ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 30ರಂದು ತೃತೀಯ ಭಾಷಾ ವಿಷಯಗಳೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಇದು ಮುಂದಿನ ತರಗತಿಗಳ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗಲಿದೆ.








