(ನ್ಯೂಸ್ ಕಡಬ) newskadaba.com, ಮಾ.17 ರಾಜ್ಯದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ೧೮ ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ ೧:೧೫ ರವರೆಗೆ ಪರೀಕ್ಷೆಗಳು ಜರುಗಲಿವೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಬರಲು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ತಪ್ಪದೇ ತಮ್ಮ ಹಾಲ್ ಟಿಕೆಟ್ ಅನ್ನು ಜೊತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.








