ಗೃಹಲಕ್ಷ್ಮಿ ಕಂತು ವಿಳಂಬ – ಸರ್ಕಾರಕ್ಕೆ ‘ಹೈ’ ನೋಟಿಸ್



(ನ್ಯೂಸ್‌ ಕಡಬ) newskadaba.com ಮೇ. 22. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.







ಬೆಂಗಳೂರು ಕಮಲಾನಗರ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ನ್ಯಾಯಮೂರ್ತಿಗಳಾದ ಡಾ. ಕೆ. ಮನ್ಮಥ ರಾವ್ ಮತ್ತು ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿ, ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದರು. ಸರ್ಕಾರದಿಂದ ಆಕ್ಷೇಪಣೆ ಸಲ್ಲಿಸಲು ಸೂಚಿಸಿರುವ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮುಂದೂಡಿದೆ.






error: Content is protected !!
Scroll to Top