(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕೋಮು ಸೌಹಾರ್ದತೆ ಹಾಳು ಮಾಡುವಂತಹ ಮತೀಯವಾದಿಗಳ ವಿರುದ್ಧ ಗೂಂಡಾ ಕಾಯ್ದೆ ಮತ್ತು ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಮತೀಯ ಭಾವನೆ ಕೆರಳಿಸಿ ಶಾಂತಿಗೆ ಭಂಗ ಉಂಟುಮಾಡುವವರು ಯಾರೇ ಆದರೂ, ಅವರು ಯಾವುದೇ ಸಂಘಟನೆಗೆ ಸೇರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಲಾಗಿದೆ. ಮಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ನಡೆಯುತ್ತಿರುವ ಅಹಿತಕರ ಘಟನೆಗಳಲ್ಲಿ ಕೆಲವು ಮತೀಯ ಸಂಘಟನೆಗಳ ಪಾತ್ರವಿದ್ದು, ಆ ಸಂಘಟನೆಗಳು ಯಾವುದೇ ಧರ್ಮಕ್ಕೆ ಸೇರಿದ್ದರೂ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕ್ರಮ ಕೈಗೊಂಡು ಗಡಿಪಾರು ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಿದರು. ಕರಾವಳಿ ಭಾಗದ ಪರಿಸ್ಥಿತಿ ಕುರಿತು ವರದಿ ನೀಡುವಂತೆ, ಅದಕ್ಕೂ ಮುನ್ನ ಸಂಘಟನೆಗಳ ಪ್ರಮುಖರೊಂದಿಗೆ ಮಾತುಕತೆ, ಶಾಂತಿಸಭೆಗಳನ್ನು ನಡೆಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದ ಅವರು, ಕರಾವಳಿಯನ್ನು ಮತೀಯವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಮತೀಯ ಭಾವನೆ ಕೆರಳಿಸುವವರು ಮತ್ತು ಇಂಥ ಪ್ರಕರಣಗಳಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಶ್ರೀರಾಮ ಸೇನೆ, ಪಿಎಫ್‌ಐ, ಬಜರಂಗದಳ, ಆರೆಸ್ಸೆಸ್, ಎಸ್‌ಡಿಪಿಐ ಸೇರಿದಂತೆ ಯಾವುದೇ ಸಂಘಟನೆ ಕೋಮು ಗಲಭೆಗೆ ಪ್ರಚೋದನೆ ನೀಡಿದರೆ ಕಠಿಣ ಕ್ರಮ ಜರಗಿಸಲಾಗುವುದು. ರೌಡಿ ಪಟ್ಟಿಯಲ್ಲಿರುವವರ ವಿರುದ್ಧ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದ ಅವರು, ಮಂಗಳೂರು ಮತ್ತು ಉಡುಪಿ ಶಾಂತಿಗೆ ಹೆಸರಾದ ಪ್ರದೇಶ. ಇಂತಹ ಬೆಳವಣಿಗೆಗಳನ್ನು ಅಲ್ಲಿ ಕೊನೆಗಾಣಿಸಿ, ಶಾಂತಿ ನೆಲೆಸುವಂತೆ ಮಾಡಬೇಕು ಸಿದ್ದರಾಮಯ್ಯ ಹೇಳಿದರು. ಕಾನೂನಿಗಿಂತ ದೊಡ್ಡವರಲ್ಲ: ನಿಷೇಧಾಜ್ಞೆ ಇದ್ದ ಸಂದರ್ಭದಲ್ಲಿ ಪ್ರತಿಭಟನೆ ಸೇರಿದಂತೆ ಯಾವುದೇ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಬಾರದು. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಪ್ರತಿಯೊಂದು ಜಿಲ್ಲೆಗೂ ಒಬ್ಬೊಬ್ಬ ಎಡಿಜಿಪಿ ಅವರಿಗೆ ಹೊಣೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.