(ನ್ಯೂಸ್ ಕಡಬ) newskadaba.com, ಜೂ.09 ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಆದರೆ, ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯದೆ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರಿಂದ ಕೇಂದ್ರದ ಅನುದಾನ ಸ್ಥಗಿತಗೊಂಡು ರಾಜ್ಯಕ್ಕೆ ಆರ್ಥಿಕ ನಷ್ಟವಾಗುತ್ತಿದೆ ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರಿಗಳಿಗಿಂತ ಜನಪ್ರತಿನಿಧಿಗಳ ಆಡಳಿತ ಮುಖ್ಯವಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಗಸ್ಟ್ ಅಂತ್ಯದೊಳಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜಣ್ಣ ಒತ್ತಾಯಿಸಿದ್ದಾರೆ.













