(ನ್ಯೂಸ್ ಕಡಬ) newskadaba.com, ಜೂ.18 : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಮಗುಚಿ ಬಿದ್ದಿದ್ದು, ಈ ವೇಳೆ ಚಾಲಕ ಲಾರಿಯ ಬೃಹತ್ ಚಕ್ರಗಳ ಅಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಅಪಘಾತದ ಸೌಂಡ್ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣವೇ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಭಾರಿ ಶ್ರಮದ ಬಳಿಕ ಲಾರಿಯ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.









