(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ರೂ. 25 ಕೋಟಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ದುರ್ಬಳಕೆ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದ್ದಾರೆ.
ಈ ಕುರಿತು ಶುಕ್ರವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲದೆ ಬಿಜೆಪಿ ಬೆಂಬಲಿತ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಅನುದಾನ ವಿತರಿಸಲಾಗುತ್ತಿದೆ ಎಂದು ದೂರಿದರು. ಅಗತ್ಯವಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕಡೆಗಣಿಸಿರುವುದರಿಂದ ಕಡಬ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಕಡಬದ ಸರಸ್ವತಿ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಸುಮಾರು ರೂ.50 ಲಕ್ಷ ಅನುದಾನ ನೀಡಲಾಗಿದೆ ಎಂದು ಉಲ್ಲೇಖಿಸಿ, ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರಿ ಅನುದಾನ ನೀಡಿರುವ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಈ ಕುರಿತು ಮುಖ್ಯಮಂತ್ರಿ ಸಮಗ್ರ ತನಿಖೆ ನಡೆಸಿ, ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಡಬ ತಾಲೂಕಿನಲ್ಲಿ 118 ಪ್ರಾಥಮಿಕ, ಪ್ರೌಢ ಹಾಗೂ ಅನುದಾನಿತ ಶಾಲೆಗಳಿದ್ದು, ಸುಮಾರು 8,358 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದ್ದರೂ ಅವುಗಳನ್ನು ಕಡೆಗಣಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಿರುವುದು ಸಮಂಜಸವಲ್ಲ ಎಂದು ಆರೋಪಿಸಿದರು.
ಸರ್ಕಾರ ನೀಡಿರುವ ಅನುದಾನದ ಹಂಚಿಕೆ ಹಾಗೂ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಿ, ಸಾರ್ವಜನಿಕ ಹಣದ ದುರ್ಬಳಕೆ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕ್ಸೇವಿಯರ್ ಬೇಬಿ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮೇಲಿನಮನೆ, ಎಸ್‌ಸಿ ಘಟಕದ ಅಧ್ಯಕ್ಷ ಶಶಿಧರ ಬೊಟ್ಟಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಾಕಿರ್, ಸೇವಾದಳದ ಅಧ್ಯಕ್ಷ ಸುಜಿತ್ ಪಿ.ಕೆ., ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುಧೀರ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.









