(ನ್ಯೂಸ್ ಕಡಬ) newskadaba.com, ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು.
ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಮಾಜಿ ಅಧ್ಯಕ್ಷರಾಗಿ ಹಾಗೂ ಶ್ರೀ ಭಗವತಿ ದೇವಸ್ಥಾನದ ಆಡಳಿತ ಸಮಿತಿಯ ಸಕ್ರಿಯ ಸದಸ್ಯರಾಗಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
ಮೃತರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆ 4 ಗಂಟೆಗೆ ಸಸಿಹಿತ್ಲುವಿನ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು, ಬಳಿಕ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.









