
(ನ್ಯೂಸ್ ಕಡಬ) newskadaba.com, ಸೆ. 16. ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಮಂಗಳೂರು ಬಜಾಲ್ ನಂತೂರು ನಿವಾಸಿ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್(34) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ : 24 /2020, ಕಲಂ: 143, 147, 148, 504, 323, 324, 506, 427 r/w 149 IPC & 2(a) Prevention of destruction and lose of Property Act ಅಡಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣ ಸಂಬಂಧ ನ್ಯಾಯಾಲಯ ವಿಚಾರಣೆಗೆ ಹಾಜರಾಗದೇ ಸುಮಾರು 6 ವರ್ಷಗಳಿಂದ ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

ಸೆಪ್ಟೆಂಬರ್ 15 ರಂದು ಆರೋಪಿಯು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ. ಈ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ. 29 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.




