ಕಡಬ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ದಂಡ ವಿಧಿಸಿ ಆದೇಶ

(ನ್ಯೂಸ್‌ ಕಡಬ) newskadaba.com, ಅ .30 . ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಗೆ ಸಂಬಂಧಿಸಿದಂತೆ ಕಡಬ ನೂಜಿಬಾಳ್ತಿಲ ನಿವಾಸಿ ಆರೋಪಿ ಸದ್ದಾಂ (34) ಎಂಬಾತನಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಆಗಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್. ಕೆ ರವರು ಪ್ರಕರಣದ ವಿಚಾರಣೆ ನಡೆಸಿ ಆರೋಪಿ ಸದ್ದಾಂ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬಳಿಕ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು.7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು (ಕಾರ್ಯ ನಿರ್ವಹಣೆ -ಪುತ್ತೂರು) ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಪೋಕ್ಸೋ ಕಾಯ್ದೆಯ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 50,000 ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ, ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಐ.ಪಿ.ಸಿಯ ಸೆಕ್ಷನ್ 506 ರ ಅಡಿಯಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ (ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ) ವಿಧಿಸಲಾಗಿದೆ.

ಆರೋಪಿ ಕಡಬ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಕಡಬ ಪೊಲೀಸ್ ಠಾಣೆ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣದಲ್ಲಿ ಸರಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.

Scroll to Top