(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.17.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಗಳು ಮೂಲತಃ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯ ಹಸೀನಾ(30), ಸಾನಿಯಾ(17) ಹಾಗೂ ಮಕ್ಕಳಾದ ಶಾಜಿಯಾ(8) ಮತ್ತು ಜೋಯಾ(5). ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ ಗುಂಡಿ ತಪ್ಪಿಸಲು ಹೋದಾಗ ಆಟೋ ಚಕ್ರವೊಂದು ಕಳಚಿ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಉಳಿದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ದೇವನಹಳ್ಳಿ ತಾಲ್ಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ್ದ ವಿಶ್ವನಾಥಪುರ ಪಿಎಸ್ ಐ ಮಂಜುನಾಥ್ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿ ಅಪಘಾತಕ್ಕೀಡಾದ ಆಟೋವನ್ನು ಸ್ಥಳಾಂತರ ಮಾಡಿಸಿದ್ದಾರೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













