ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ ➤ ನಾಳೆ (ಶುಕ್ರವಾರ) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರದವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಸೇವೆ (1077)ಗೆ ದಿನದ 24 ಗಂಟೆಯೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

error: Content is protected !!

Join the Group

Join WhatsApp Group