(ನ್ಯೂಸ್ ಕಡಬ) newskadaba.com ನವದೆಹಲಿ ,ಮೇ.29: ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, 4 ಹಂತದ ನೇ ಲಾಕ್ ಡೌನ್ ಮೇ 31ಕ್ಕೆ ಮುಕ್ತಾಯಗೊಳ್ಳುತ್ತಿದೆ. 5 ನೇ ಹಂತದ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ರಾತ್ರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ ಅಮಿತ್ ಶಾ ಲಾಕ್ ಡೌನ್ ಬಗ್ಗೆ ಮೇ 31ರ ಬಳಿಕ ಯಾವ ರೀತಿಯ ನಿಯಮಾವಳಿಗಳಿರಬೇಕು? ನೂತನ ಲಾಕ್ ಡೌನ್ ಸ್ವರೂಪ ಹೇಗಿರಬೇಕು? ಅದನ್ನು ಹೇಗೆ ಜಾರಿ ಮಾಡಬೇಕು ಎಂಬ ಸಲಹೆಗಳನ್ನು ಕೇಳಿದರು ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
ಇದಲ್ಲದೆ ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ದೇಶದ 13 ನಗರಗಳ ನಗರಪಾಲಿಕೆ, ಮಹಾನಗರ ಪಾಲಿಕೆಗಳ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ನಾಯಕರು ಸಂಗ್ರಹಿಸಿದ ಮಾಹಿತಿಗಳೆಲ್ಲವನ್ನು ಇಂದು ಪ್ರಧಾನ ಮಂತ್ರಿಗಳ ಕಚೇರಿಗೆ ಕಳುಹಿಸಲಾಗುತ್ತದೆ. ಅಮಿತ್ ಶಾ ಕೂಡ ಪ್ರಧಾನಿ ಮೋದಿ ಭೇಟಿ ಮಾಡಿ ಮುಖ್ಯಮಂತ್ರಿಗಳ ಅಭಿಪ್ರಾಯವನ್ನು ತಿಳಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.