(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜೂ.27, ಖಾಸಗಿ ಬಸ್ ಚಾಲಕರೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಪತಿ ಹೊರ ರಾಜ್ಯಗಳಿಗೆ ಸಂಚರಿಸುತ್ತಿದ್ದ ಬಸ್ಸಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕಳೆದೊಂದು ವಾರದಿಂದಲೂ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆ ನಡೆಸಲಾಗಿದ್ದು, ತಪಾಸಣಾ ವರದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿದ್ದರವನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಇನ್ನು ಕೊರೋನಾ ಸೋಂಕಿನ ಮೂಲವನ್ನು ಆರೋಗ್ಯಾಧಿಕಾರಿಗಳು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ. ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೋಟ ಕಂದಾಯ ನಿರೀಕ್ಷಕರಾದ ರಾಜಶೇಖರ್ ಅವರ ನೇತೃತ್ವದಲ್ಲಿ ಪಾಂಡೇಶ್ವರ ಶಾಲೆಯ ಸಮೀಪದಲ್ಲಿರುವ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.