(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳು ಜಲಾವೃತವಾಗಿವೆ. ಬಿಡದೇ ಸುರಿದ ಮಳೆಯಿಂದಾಗಿ ಮಂಗಳೂರಿನ ಕೊಂಚಾಡಿಯಲ್ಲಿ 12 ಅಂತಸ್ತಿನ ಎಸೆಲ್ ಹೈಟ್ಸ್ ಫ್ಲ್ಯಾಟ್ ಹಿಂಭಾಗದಲ್ಲಿ ಧರೆ ಕುಸಿದಿದೆ. ಧರೆ ಕುಸಿದು ಹಲವು ವಾಹನಗಳು ಜಖಂ ಆಗಿವೆ. ಮುಂಜಾಗ್ರತಾ ಕ್ರಮವಾಗಿ ಫ್ಲ್ಯಾಟ್ನಲ್ಲಿದ್ದ ನೂರಾರು ಮಂದಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಫ್ಲಾಟ್ ಮುಂಭಾಗದ ರಸ್ತೆ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ SDRF, NDRF ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ರಾತ್ರಿಯಿಂದ ಸುರಿದ ಮಳೆಗೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ. ಅಲ್ಲಿನ 50ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿವೆ. ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳ, ಹೋಮ್ ಗಾರ್ಡ್, ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮನೆಯಲ್ಲಿನ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಹೆಚ್ಚಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.