(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ದ.ಕ.ಜಿಲ್ಲೆಯಲ್ಲಿ ಅ.29 ರಂದು ನಡೆಯಲಿರುವ ಈದ್ ಮಿಲಾದ್ ಪ್ರಯುಕ್ತ ಕೊರೋನಾ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿಯವರು ಮಾರ್ಗಸೂಚಿಯೊಂದನ್ನು ಪ್ರಕಟಿಸಿದ್ದು, ಮೆರವಣಿಗೆ, ಗುಂಪು ಸೇರುವಿಕೆ, ಧಾರ್ಮಿಕ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸದಂತೆ ಆದೇಶ ಹೊರಡಿಸಿದ್ದಾರೆ.
ಈ ಕಾರ್ಯಕ್ರಮದ ಸಂದರ್ಭ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ/ಡಿಜಿಟಲ್/ ಸೌಂಡ್ ಸಿಸ್ಟಮ್ ಬಳಸಬಾರದು. ಕಬರ್ ಸ್ಥಾನ ಸಹಿತ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನಕ್ಕೂ ಅವಕಾಶಗಳಿಲ್ಲ. ಮಸೀದಿ- ದರ್ಗಾಗಳಲ್ಲಿ ಸುರಕ್ಷಿತ ಅಂತರ ಕಾಪಾಡಬೇಕು. ಮಾಸ್ಕ್ ಅನ್ನು ಕಡ್ಡಾಯವಾಗಿ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಆಚರಿಸಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ವೈಯಕ್ತಿಕವಾಗಿ 6 ಅಡಿ ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.