(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: 1999ರ ಜಾರ್ಖಂಡ್ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು. ದಿಲೀಪ್ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಸಿಟಿಎಲ್ ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.