(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.24. ಕೊರೋನಾ 2ನೇ ಅಲೆಯ ಭೀತಿಯಿಂದ ರಾತ್ರಿ ಕರ್ಫ್ಯೂ ಹೇರಲು ತೀರ್ಮಾನಿಸಿದ್ದ ರಾಜ್ಯ ಸರಕಾರವು, ಆದೇಶದಲ್ಲಿ ಮಾರ್ಪಾಡು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂದು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಎಂದಿದ್ದಾರೆ. ರಾತ್ರಿ ಕರ್ಫ್ಯೂ ಹೇರಲು ಮುಂದಾಗಿದ್ದ ರಾಜ್ಯ ಸರಕಾರದ ತೀರ್ಮಾನದ ವಿರುದ್ಧ ಸಾರ್ವಜನಿಕರಿಂದ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲಾಗಿದೆ.