(ನ್ಯೂಸ್ ಕಡಬ) newskadaba.com ಮಡಿಕೇರಿ, ಎ. 04. ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಏ.03ರಿಂದ ಎ. 20ರ ವರೆಗೆ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಿ, ಎಲ್ಲಾ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶ ಉಲ್ಲಂಘನೆಯಾದಲ್ಲಿ ಶಿಕ್ಷಾರ್ಹವಾಗಿರುತ್ತದೆ ಎಂದೂ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ಬೇಸಿಗೆ ಅವಧಿಯಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುವುದು ಸಾಮಾನ್ಯವಾಗಿದ್ದರೂ, ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ಪ್ರವಾಸಿ ತಾಣಗಳಲ್ಲಿ ಮೋಜು ಮಸ್ತಿಯ ಹೆಸರಿನಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಕಡಿವಾಣ ಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಪ್ರಸಿದ್ದ ಪ್ರವಾಸಿ ತಾಣಗಳಾದ ದುಬಾರೆ, ಕಾವೇರಿ ನಿಸರ್ಗ ಧಾಮ, ಮಡಿಕೇರಿಯ ರಾಜಾಸೀಟು, ಮಾಂದಲ್ ಪಟ್ಟಿ, ಅಬ್ಬಿಫಾಲ್ಸ್, ಕೋಟೆ ಅಬ್ಬಿ, ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತ, ಇರ್ಪು, ಚೇಲಾವರ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಪ್ರವಾಸಿ ಚಟುವಟಿಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.