(ನ್ಯೂಸ್ ಕಡಬ) Newskadaba.com ಕಡಬ, ಮೇ. 25. ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದರು.
ಬಳಿಕ ಮಾತನಾಡಿದ ಸಚಿವ ಎಸ್.ಅಂಗಾರ, ಈ ತನಕ ಹೋಮ್ ಐಸೋಲೇಷನ್ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದರೂ ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳೇ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಮನೆಯವರ ಬಗ್ಗೆಯೇ ಕಾಳಜಿ ತೋರಿಸದೆ ತಿರುಗಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂಥ ವ್ಯಕ್ತಿಗಳನ್ನು ಕೋವಿಡ್ ಸೆಂಟರ್ಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು. ಅಲ್ಲದೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಈಗಾಗಲೇ ಆಕ್ಸಿಜನ್ ಪ್ಲಾಂಟ್ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದರು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂಜ, ಸುಬ್ರಹ್ಮಣ್ಯ ಹಾಗೂ ನೆಲ್ಯಾಡಿ ವ್ಯಾಪ್ತಿಯಲ್ಲೂ ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ದಾನಿಗಳ ಸಹಕಾರದೊಂದಿಗೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸೇವಾಭಾರತಿ ಮತ್ತು ಸಚಿವರ ವಾರ್ ರೂಂ ಮೂಲಕ ಕೊಡಮಾಡಲಾದ ದಿನಸಿ ಕಿಟ್ಗಳನ್ನು ಕಡಬ ಸಮುದಾಯ ಆಸ್ಪತ್ರೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ವಿತರಿಸಲಾಯಿತು.