(ನ್ಯೂಸ್ ಕಡಬ) newskadaba.com ಕಡಬ, ಡಿ. 06. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಡಬ ತಾಲೂಕು ಪತ್ರಕರ್ತರ ಸಂಘ, ಪಿಜಕಳ ಸರ್ಕಾರಿ ಕಿ.ಪ್ರಾ. ಶಾಲೆಯ ಎಸ್‌ಡಿಎಂಸಿ ಹಾಗೂ ಪಿಜಕಳದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪದ್ಮಶ್ರೀ ಪುರಸ್ಕೃತ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರಿಗೆ ಸಮ್ಮಾನ ಸಮಾರಂಭವು ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಡಿ. 07ರಂದು ಬೆಳಿಗ್ಗೆ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಹಶೀಲ್ದಾರ್ ಅನಂತಶಂಕರ ಬಿ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಅವರು ಅತಿಥಿಗಳಾಗಿ ಭಾಗವಹಿಸಲಿರುವರು. ಸಮಾರಂಭದಲ್ಲಿ ಪಿಜಕಳ ಶಾಲಾ ಮಕ್ಕಳಿಗೆ ಕುದುರೆಮುಖ ಕಬ್ಬಿಣ ಹಾಗೂ ಅದಿರು ಕಂಪೆನಿಯ ಸಿಎಸ್‌ಆರ್ ನಿಧಿಯಿಂದ ನೊಟ್ ಬುಕ್ ವಿತರಣೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಬ್ ಮತ್ತು ಬುಲ್ ಬುಲ್ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪ್ರಶಸ್ತಿ ಪಡೆದ ಪಿಜಕಳ ಶಾಲಾ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ಪತ್ರಕರ್ತ ದಿವಂಗತ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾದ ಐದು ಲಕ್ಷ ರೂ. ಪರಿಹಾರ ಧನದ ಚೆಕ್ ಹಸ್ತಾಂತರ ನಡೆಯಲಿದೆ ಎಂದು ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.