(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 06. ಖ್ಯಾತ ಆಲ್ ರೌಂಡರ್ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯವಾಗಿದೆ. ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ, ಚೆನ್ನೈ ಸೂಪರ್ ಕಿಂಗ್ಸ್, ರಾಜೀವ್ ಶುಕ್ಲಾ ಹಾಗೂ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ, ಪ್ರೋತ್ಸಾಹಿಸಿದ ಎಲ್ಲಾ ಅಭಿಮಾನಿಗಳಿಗೂ ಧನ್ಯವಾದ ಸಲ್ಲಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. 2020ರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಧೋನಿ ಅತ್ಯಾಪ್ತರಾಗಿದ್ದ ರೈನಾ ಸಹ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಅದಾಗಿಯೂ ವರ್ಲ್ಡ್ ರೋಡ್ ಸೇಫ್ಟಿ ಸೀರೀಸ್ ಸೇರಿದಂತೆ, ವಿದೇಶಗಳಲ್ಲಿ ನಡೆಯುವ ಟಿ20 ಲೀಗ್ ಕೂಟಗಳಲ್ಲಿ ರೈನಾ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದಾರೆ. 13 ವರ್ಷಗಳ ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಟೀಮ್ ಇಂಡಿಯಾ ಪರ ರೈನಾ, 18 ಟೆಸ್ಟ್, 226 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನು ಆಡಿದ್ದಾರೆ. 226 ಏಕದಿನ ಪಂದ್ಯಗಳಲ್ಲಿ 5615 ರನ್, 78 ಟಿ20 ಪಂದ್ಯಗಳಿಂದ 1605 ರನ್ ದಾಖಲಿಸಿದ್ದಾರೆ.