(ನ್ಯೂಸ್ ಕಡಬ) newskadaba.com ಶ್ರೀ ನಗರ, ಜ.08. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಈ ವೇಳೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಹೇಳಿದರು. ಸೇನೆಯು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಹತ್ಯೆಯಾದ ಭಯೋತ್ಪಾದಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.