(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ನಡೆದ ಯುವಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ನಾಲ್ಕು ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಒರ್ವನ ಸುಳಿವು ಲಭ್ಯವಾಗಿದ್ದು, ಶೀಘ್ರದಲ್ಲೇ ಕೃತ್ಯಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಕಲ್ಲಡ್ಕದ ಅಂಗಡಿಯೊಂದರ ಬಳಿ ನಿಂತಿದ್ದ ವೀರಕಂಬದ ಕೇಶವ ಎಂಬಾತನಿಗೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಲೀಲ್ ಕರೋಪಾಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಗುರುತಿಸಿದ್ದ ಕೇಶವ ಇತ್ತೀಚೆಗಷ್ಟೆ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದರೆನ್ನಲಾಗಿದೆ.
ಘಟನೆಯಿಂದಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದ ಕಲ್ಲಡ್ಕ ಪ್ರಸ್ತುತ ಸಂಪೂರ್ಣ ಸಹಜ ಸ್ಥಿತಿಗೆ ಮರಳುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ.