(ನ್ಯೂಸ್ ಕಡಬ) newskadaba.com ಕಡಬ, ಮಾ.24. ಹೊಸದಾಗಿ ನಿರ್ಮಾಣಗೊಂಡ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕಡಬ ತಾಲೂಕಿನ ಹಿರಿಮೆಗೆ ಗರಿಯಾದ ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣಾ ಸಮಾರಂಭವು ಶುಕ್ರವಾರದಂದು ಕಡಬದಲ್ಲಿ ನಡೆಯಲಿದೆ.
ಕಡಬದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಕಚೇರಿಗಳು ಲಭ್ಯವಾಗುವಂತೆ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧ, 4.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಕೊಲದಲ್ಲಿ 136 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಮೊದಲನೇ ಹಂತದ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನಾಮಫಲಕ ಅನಾವರಣಗೊಳಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಚಿವ ಎಸ್.ಅಂಗಾರ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಸದರಾದ ಡಾ|ಡಿ. ವೀರೇಂದ್ರ ಹೆಗ್ಗಡೆ, ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಡಬದ ತಾ.ಪಂ. ಕಟ್ಟಡದ ವಠಾರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಡಬ ತಾಲೂಕು ವ್ಯಾಪ್ತಿಯ ಸುಮಾರು 500 ಫಲಾನುಭವಿಗಳಿಗೆ ಅಕ್ರಮ ಸಕ್ರಮ ಮತ್ತು 94 ಸಿ ಹಕ್ಕುಪತ್ರಗಳ ವಿತರಣೆ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ನೆರವೇರಲಿದೆ ಎಂದು ಕಂದಾಯ ಇಲಾಖೆಯ ಪ್ರಕಟನೆ ತಿಳಿಸಿದೆ.