(ನ್ಯೂಸ್ ಕಡಬ) newskadaba.com ಪುತ್ತೂರು, ಜ.19. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಪುತ್ತೂರು ಕೋಟಿ- ಚೆನ್ನಯ್ಯ ಹೊನಲು ಬೆಳಕಿನ ಜೋಡುಕರೆ ಕಂಬಳವು ನಾಳೆ (ಜ.20) ಶನಿವಾರದಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಹೇಳಿದರು.
ಕಂಬಳದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 25ನೇ ವರ್ಷದ ಹಿನ್ನೆಲೆಯಲ್ಲಿ ಕಂಬಳದಲ್ಲಿ ಭಾಗವಹಿಸುವ ಎಲ್ಲಾ ಜೋಡಿ ಕೋಣಗಳಿಗೂ ಒಂದು ಮುಡಿ ಅಕ್ಕಿ ಹಾಗೂ ರಜತ ಫಲಕ ನೀಡಲಾಗುವುದು. ನಾಳೆ ಬೆಳಗ್ಗೆ 10.32ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದು, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ, ಅನುರಾಧಾ ಮುತ್ತಪ್ಪ ರೈ ಸೇರಿದಂತೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಶಾಸಕರಾದ ವಸಂತ ಬಂಗೇರ, ಪ್ರತಾಪಚಂದ್ರ ಶೆಟ್ಟಿ, ಎಂಎಲ್‌ಸಿ ಐವನ್ ಡಿ’ಸೋಜಾ, ಬೆಂಗಳೂರು ಎಂಆರ್‌ಜಿ ಬಂಜಾರ ಗ್ರೂಪ್ಸ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸಹಿತ ಹಲವರಿಗೆ ಸನ್ಮಾನ ಮಾಡಲಾಗುವುದು ಎಂದರು.
ಜ. 21 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಶಕುಂತಳಾ ಟಿ. ಶೆಟ್ಟಿ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು, ಎಪಿಎಂಸಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಬಲ್ನಾಡು ಶ್ರೀ ಉಳ್ಳಾಲ್ತಿ ದಂಡನಾಯಕ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಚನಿಲ ತಿಮ್ಮಪ್ಪ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯ ಕರ್ನಾಟಕ ಸಂಸ್ಥೆಯ ತಾಲೂಕು ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮುಖ್ಯ ಅತಿಥಿಗಳಾಗಿರುವರು. ಕಂಬಳದ ವಿಶೇಷ ಆಕರ್ಷಣೆಯಾಗಿ ನಟರಾದ ಗೋಲ್ಡನ್ ಸ್ಟಾರ್ ಗಣೇಶ್, ರಂಗಾಯಣ ರಘು, ರಕ್ಷಿತ್ ಶೆಟ್ಟಿ, ರಶ್ಮಿಕ ಮಂದಣ್ಣ ಭಾಗವಹಿಸಲಿದ್ದಾರೆ ಎಂದರು.